07/09/2026
ಕೇರಳದ ರಾಜ್ಯಸಭಾ ಸದಸ್ಯ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಸಿ. ಸದಾನಂದನ್ ಮಾಸ್ಟರ್ ಅವರು ಸೋಮವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಸದಾನಂದನ್ ಮಾಸ್ಟರ್ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು. ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಪ್ರಸಾದ ನೀಡಿ ಗೌರವಿಸಿದರು. ಕೇರಳದ ನಿವೃತ್ತ ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್ ಅವರು ಹಲವು ವರ್ಷಗಳಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 2025ರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಸಾಮಾಜಿಕ ಸೇವಾ ಕ್ಷೇತ್ರವನ್ನು ಪ್ರತಿನಿಧಿಸುವ ನಾಮನಿರ್ದೇಶಿತ ಸದಸ್ಯರಾಗಿ ಅವರು ಸಂಸತ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ...